ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ನೀಡಿರುವ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿಯನ್ನು ಕೋಮುವಾದಿ ಎಂದು ಕರೆಯುವ ಕಾಂಗ್ರೆಸ್‌ಗೆ ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದ ಅವರು,ಜನ ಬಿಜೆಪಿ ಕೈ ಹಿಡಿಯುವ ಮೂಲಕ ಲೋಕಸಭಾ ಚುನಾವಣೆಯಲ್ಲಿ 22 ಸೀಟುಗಳನ್ನು ಪಡೆಯುವ ಭರವಸೆ ಇರುವುದಾಗಿ ಹೇಳಿದರು.
ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ ನಾಯಕ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸ್ಪಷ್ಟ ಬಹುಮತ ದೊರೆಯಲಿದೆ. ಈ ಮೂಲಕ ದೇಶದ ಉನ್ನತ ಹುದ್ದೆಯಾದ ಪ್ರಧಾನಮಂತ್ರಿ ಸ್ಥಾನವನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್.ಕೆ.ಆಡ್ವಾಣಿ ಅಲಂಕರಿಸುವುದು ಗ್ಯಾರಂಟಿ ಎಂದು ಯಡಿಯೂರಪ್ಪ ವಿಶ್ವಾಸದಿಂದ ಹೇಳಿದರು.
ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ನೀಡಿರುವ ಪ್ರಚೋದನಕಾರಿ ಹೇಳಿಕೆ ಅಕ್ಷಮ್ಯ. ಈ ಬಗ್ಗೆ ಚುನಾವಣೆ ಆಯೋಗ ಗಮನ ಹರಿಸಬೇಕು ಎಂದು ಅವರು ಹೇಳಿದರು.
ಹಿಂದುತ್ವ ಎನ್ನುವವರ ಕೈ ಕಡಿಯಬೇಕು ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ಸೊರಬದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತ ಹರಿಹಾಯ್ದಿದ್ದರು. ಇದೀಗ ಕಾಗೋಡು ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಚುನಾವಣಾ ಆಯೋಗದ ಕೆಂಗಣ್ಣಿಗೂ ಗುರಿಯಾಗಿದೆ. |