ಬೆಂಗಳೂರು ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ, ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್(ನರ್ಮ್)ಯೋಜನೆಯಡಿ ಬಿಡುಗಡೆ ಮಾಡಿರುವ ಹಣವನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಂಡಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಕಾಂಗ್ರೆಸ್‌ನ ಮೂವರು ಮಾಜಿ ಮೇಯರ್‌ಗಳಾದ ಪಿ.ಆರ್.ರಮೇಶ್, ಜೆ.ಹುಚ್ಚಪ್ಪ ಹಾಗೂ ರಾಮಚಂದ್ರಪ್ಪ ಅವರು ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಒತ್ತಾಯ ಮಾಡಿದರು.
ನರ್ಮ್ ಯೋಜನೆ ಹಣವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜತೆಗೆ ಈ ಯೋಜನೆ ಹಣವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರಿಗೆ ವೇತನ ಮತ್ತು ಪಿಂಚಣಿಗಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಅವರು ನೇರ ಆರೋಪ ಮಾಡಿದರು. |