ರಾಜ್ಯದಲ್ಲಿ ಸುವ್ಯವಸ್ಥಿತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ| ಅಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಕ್ಸಲ್ ಪೀಡಿತ ಪ್ರದೇಶಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಮಲೆನಾಡುಗಳಲ್ಲಿ 100 ಮತದಾನ ಕೇಂದ್ರಗಳಿಗೆ ನಕ್ಸಲ್ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆಯ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗಿದೆ ಎಂದರು.
ಈ ನಿಟ್ಟಿನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ 20 ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ 100 ಮತದಾನ ಕೇಂದ್ರಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಕೆಲವು ವ್ಯಕ್ತಿಗಳ ಛಾಯಾಚಿತ್ರ ಬಿಡುಗಡೆ ಮಾಡಿ, ಅವರ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಿರುವುದಕ್ಕೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು. |