ಮುಸ್ಲಿಮರ ಮೇಲೆ ವಿಶೇಷ ಪ್ರೀತಿ ಹೊಂದಿರುವ ಕಾರಣದಿಂದಾಗಿಯೇ ಕಾಂಗ್ರೆಸ್ ಪಕ್ಷ ಕೋಕಾ(ಸಂಘಟಿತ ಅಪರಾಧಗಳ ನಿಯಂತ್ರಣ)ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಯೋತ್ಪಾದನೆ ಎದುರಿಸುವ ಸಲುವಾಗಿ ಕೋಕಾ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ. ಕೋಕಾ ಕಾಯ್ದೆ ಜಾರಿಗೆ ತರಬೇಕು ಎಂಬ ಚಿಂತನೆ ನಡೆಸುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷ ನಾಯಕರು ಭೀತಿಗೆ ಒಳಗಾಗಿದ್ದಾರೆ ಎಂದು ಲೇವಡಿ ಮಾಡಿದರು.
ಉಗ್ರರ ನಿಗ್ರಹಕ್ಕೆ ತರುತ್ತಿರುವ ಕಾಯ್ದೆಗೆ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಉಗ್ರರೊಂದಿಗೆ ಯಾವ ಸಂಬಂಧವಿದೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ದೇವೇಗೌಡರ ಆಟ ಈ ಚುನಾವಣೆಯಲ್ಲಿ ನಡೆಯಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಜೆಡಿಎಸ್ ಅಕ್ರಮವಾಗಿ ಒಳಒಪ್ಪಂದ ಮಾಡಿಕೊಂಡಿತ್ತು. ತೃತೀಯ ರಂಗ ಒಡೆದು ಹೋಳಾಗುತ್ತಿರುವ ಬೆನ್ನಲ್ಲೇ ಜೆಡಿಎಸ್ ಮತ್ತೆ ಕಾಂಗ್ರೆಸ್ ಬಾಗಿಲು ತಟ್ಟತೊಡಗಿರುವುದೇ ಜೆಡಿಎಸ್ ಪಕ್ಷದ ಸ್ಥಿತಿಗೆ ಹಿಡಿದ ಕೈಗನ್ನಡಿ ಎಂದರು. |