ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಖಾಸಗಿ ಶಾಲೆಗಳಿಗೆ ಅನುಮತಿ ನೀಡುವಂತೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಬಹುದು ಎಂಬ ಆಶಾವಾದ ಇತ್ತು. ಆದರೆ ರಜೆಯ ನಂತರ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಕೋರ್ಟ್ ಹೇಳಿದೆ. ಆದ್ದರಿಂದ ನಾವು ಏನು ಮಾಡಬಹುದು ಎಂಬ ಬಗ್ಗೆ ಕಾನೂನು ಸಚಿವರು, ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ ಕಾರ್ಯದರ್ಶಿ ಮೊದಲಾದವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕೋರ್ಟ್ ಆದೇಶದಿಂದ ಬೇಸರ: ಸರ್ವೋಚ್ಛನ್ಯಾಯಾಲಯ ತಡೆಯಾಜ್ಞೆ ನೀಡದೆ ಇರುವುದು ತುಂಬಾ ದುಃಖದ ಸಂಗತಿ, ಸರ್ಕಾರ ಕೂಡಲೇ ಸಚಿವ ಸಂಪುಟದಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡಬಾರದು, ನ್ಯಾಯಾಲಯಕ್ಕೂ ಮುಜುಗರ ಆಗದ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. |