ಅಧಿಕಾರಕ್ಕಾಗಿ ಜೆಡಿಎಸ್, ಕಾಂಗ್ರೆಸ್ ಪಕ್ಷದ ಬಾಗಿಲು ಬಡಿಯುತ್ತಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಗೌಡ, ಇದರ ಬದಲು ಜೆಡಿಎಸ್ ಅನ್ನು ಕಾಂಗ್ರೆಸ್ನಲ್ಲಿ ವಿಲೀನಗೊಳಿಸುವುದು ಉತ್ತಮ ಎಂದಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಈ ಎರಡು ಪಕ್ಷಗಳ ನಡುವೆ ಒಳಒಪ್ಪಂದ ಕ್ಕೆ ತಕ್ಕಂತೆ ಉತ್ತರ ಏನು ಎಂಬುದನ್ನು ಫಲಿತಾಂಶಗಳು ತೋರಿಸಿವೆ ಎಂದರು.
ಚುನಾವಣಾ ಸಂದರ್ಭದಲ್ಲಿ ಪರದೆ ಹಿಂದೆ ಇದ್ದ ಜೆಡಿಎಸ್ ಈಗ ಪರದೆ ಮುಂದಕ್ಕೆ ಬಂದು ಅಧಿಕಾರಕ್ಕಾಗಿ ಕಾಂಗ್ರೆಸ್ ಬಾಗಿಲು ಬಡಿಯುತ್ತಿದೆ ಎಂದು ಲೇವಡಿ ಮಾಡಿದರು. ಇಂತಹ ಕೆಟ್ಟ ರಾಜಕಾರಣ ಮಾಡುವ ಬದಲು ಜೆಡಿಎಸ್ ಅನ್ನು ಕಾಂಗ್ರೆಸ್ ಪಕ್ಷದೊಳಗೆ ವಿಲೀನಗೊಳಿಸುವ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.
ಪ್ರತಿ ಚುನಾವಣೆಯಲ್ಲೂ ಬಿಜೆಪಿ ರಾಜ್ಯದಲ್ಲಿ ತನ್ನ ಮತಗಳಿಕೆ ಪ್ರಮಾಣ ಹೆಚ್ಚಿಸಿಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಮತಗಳಿಕೆ ಕಡಿಮೆಯಾಗುತ್ತಿದೆ ಮುಂದೆ ಈ ಪಕ್ಷಗಳ ಹೆಸರಿನ ಘಟಕ ತೆಗೆಯುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ ಎಂದು ವ್ಯಂಗ್ಯವಾಡಿದರು. |