ನಗರದಲ್ಲಿ ಕುಡಿಯುವ ನೀರಿಗಾಗಿ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾವೇರಿ ನದಿ ನೀರಿನ ಪಾಲಿನಲ್ಲಿ ಹೆಚ್ಚಿನ ಪಾಲನ್ನು ನೀಡುವಂತೆ ಒತ್ತಾಯಿಸಿ, ರಾಜ್ಯ ಸರಕಾರದ ನಿಯೋಗ ದೆಹಲಿಗೆ ತೆರಳಿ ಪ್ರಧಾನಿಯವರನ್ನು ಭೇಟಿ ಮಾಡಲಿದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ..ನೂತನವಾಗಿ ನಿರ್ಮಾಣ ಮಾಡಲಾದ ವೃತ್ತವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ಹೆಚ್ಚುತ್ತಿರುವ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸುವಲ್ಲಿ ಅಧಿಕಾರಿಗಳು ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಕಾವೇರಿ ನದಿಯ ನೀರಿನ ಪಾಲನ್ನು ಹೆಚ್ಚಿಸುವಂತೆ ಪ್ರಧಾನಿಯವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ, ನಗರದ ಜನತೆಯ ಕುಡಿಯುವ ನೀರಿನ ಬೇಡಿಕೆಯನ್ನು ಪೂರೈಸಲು ನೀರು ಸಂಗ್ರಹ, ಕೆರೆಗಳ ನಿರ್ಮಾಣ ಸೇರಿದಂತೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ನಗರದಲ್ಲಿ ಜಾಗತಿಕ ಮಟ್ಟದ ಮೂಲಸೌಕರ್ಯಗಳನ್ನು ಕಲ್ಪಿಸಲು 1300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯದಾದ್ಯಂತ ಹಲವು ಜಿಲ್ಲೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ಬೆಂಗಳೂರು ಸೇರಿದಂತೆ 7376 ಕೋಟಿ ರೂಪಾಯಿಗಳನ್ನು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. |