ಆಡಳಿತ ಪಕ್ಷದೊಂದಿಗೆ ಇನ್ನು ಮುಂದೆ ಸಂರ್ಘಷಕ್ಕೆ ಇಳಿಯುವುದಿಲ್ಲ. ಪಕ್ಷದ ಸಂಘಟನೆಯೊಂದೇ ಮುಖ್ಯ ಗುರಿ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಆಡಳಿತಾರೂಢ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಹಣದಲ್ಲಿ ವಿಕಾಸ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಣ, ಹೆಂಡದ ಮುಂದೆ ಯಾವುದೇ ಒಳ್ಳೆಯ ಕೆಲಸ ನೆನಪಿಗೆ ಬರುವುದಿಲ್ಲ ಅನ್ನೋ ಅಂಶ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯಕ್ಕೆ ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ ಕೂಡ ಜನರು ಅಭಿವೃದ್ಧಿ ಕಾರ್ಯವನ್ನು ಮರೆತು ಹಣ, ಹೆಂಡಕ್ಕೆ ಮಾರು ಹೋಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಪಕ್ಷದ ಮುಖಂಡರು ತಾವು ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನ ಮತ ಹಾಕಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಅದು ಸುಳ್ಳು. ಹಣ, ಹೆಂಡ ಬಲದ ಮೇಲೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಂದೊಂದು ದಿನ ಬಿಜೆಪಿ ಸರ್ಕಾರದ ಆಡಳಿತಕ್ಕೆ ರೋಸಿ ಬಿಜೆಪಿ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. |