ಬಳ್ಳಾರಿ ಗಡಿ ಒತ್ತುವರಿ ಕುರಿತು ಸೂಕ್ತ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಳೆದ ಒಂದು ವಾರದಿಂದ ನಗರದ ಮಹಾತ್ಮಗಾಂಧಿ ಪ್ರತಿಮೆ ಎದುರು ಆಮರಣಾಂತ ಉಪವಾಸ ನಡೆಸುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ದಿವಾಕರ ಬಾಬು ವಿರುದ್ಧ ಶನಿವಾರ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಲಾಗಿದೆ.
ಬಳ್ಳಾರಿ ಗಡಿವಿವಾದ ಕುರಿತಂತೆ ರಾಜ್ಯ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮಾಜಿ ಸಚಿವ ದಿವಾಕರ ಬಾಬು ಜೂ.16ರಿಂದ ನಗರದ ಮಹಾತ್ಮಗಾಂಧಿ ಪ್ರತಿಮೆ ಬಳಿ ಆಮರಣಾಂತ ಉಪವಾಸ ಕೈಗೊಂಡಿದ್ದರು. ತೀವ್ರ ಅಸ್ವಸ್ಥಗೊಂಡ ಅವರನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಾಬು ಅವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸರು ಆತ್ಮಹತ್ಯೆಗೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ವಶದಲ್ಲಿ ಇರುವ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರ್ವೆ ತಂಡದಿಂದ ಗಡಿ-ಗಣಿ ಸರ್ವೇಗೆ ಆಗ್ರಹಿಸಿ ದಿವಾಕರ ಬಾಬು ಬಳ್ಳಾರಿಯಿಂದ ಬೆಂಗಳೂರಿಗೆ ಕಳೆದ ಸೋಮವಾರ ಬೈಕ್ ರಾಲಿ ಕೈಗೊಂಡಿದ್ದರು. ಬಳಿಕ ಜೂ.16ರಿಂದ ಎಂ.ಜಿ. ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. |