ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಕಾವೇರಿ ನೀರಿನ ಹೆಚ್ಚುವರಿ ಹರಿವಿಗೆ ವಿಶೇಷ ದಾವೆ ಸಲ್ಲಿಸಿ ಸರ್ವೋಚ್ಚನ್ಯಾಯಾಲಯದಿಂದ ಅನುಮತಿ ಪಡೆಯಲಾಗುವುದು ಎಂದು ಬೆಂಗಳೂರು ಉತ್ತರ ಉಸ್ತುವಾರಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದ್ದಾರೆ.
ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿ ಬಿಪಿಎಲ್ ಕಾರ್ಡ್ ವಿತರಣೆ ಮಾಡಿ ಮಾತನಾಡುತ್ತಿದ್ದ ಕಟ್ಟಾ, ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಜನಸಂಖ್ಯಾ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಆ ನಿಟ್ಟಿನಲ್ಲಿ ಜನರಿಗೆ ಬೇಕಾದಷ್ಟು ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದರು.
ಆ ನಿಟ್ಟಿನಲ್ಲಿ ಕುಡಿಯುವ ನೀರಿಗಾಗಿ ಹೆಚ್ಚಿನ ಕಾವೇರಿ ನೀರನ್ನು ಪಡೆಯಲು ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ದಾವೆ ಹೂಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ಕುಡಿಯುವ ನೀರು ಪೂರೈಕೆಗೆ ಕರವೇ ಆಗ್ರಹ: ಕಳೆದ ಎಂಟು ತಿಂಗಳಿನಿಂದ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸದೆ ಇದ್ದುದರಿಂದ ರಾಯಚೂರು ನಗರಸಭೆಯ ಕಾರ್ಯವೈಖರಿಯನ್ನು ಖಂಡಿಸಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆಗೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು. |