ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಸಿಪಿಐ ಮಾವೋವಾದಿ ಸಂಘಟನೆ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿ ಅದನ್ನು ಭಯೋತ್ಪಾದನಾ ಸಂಘಟನೆ ಎಂದು ಕರೆದಿರುವ ಬೆನ್ನಲ್ಲೇ ರಾಜ್ಯದ ನಕ್ಸಲರು ಶಸ್ತ್ರ ಸನ್ಯಾಸ ಮಾಡಿ ಶರಣಾಗುವ ಇಂಗಿತ ವ್ಯಕ್ತಪಡಿಸಿರುವ ಸುದ್ದಿಯೊಂದು ಹೊರಬಿದ್ದಿದೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಅವರು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಕ್ಸಲೀಯರ ಹಾವಳಿ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಪ್ರಮುಖ ಅಂಶವಾಗಿದೆ. ಅಲ್ಲದೇ ಶಸ್ತ್ರ ತ್ಯಜಿಸಿ ಶರಣಾಗುವ ಸಂದೇಶವನ್ನು ನಕ್ಸಲೀಯರು ರವಾನಿಸುತ್ತಿದ್ದಾರೆ ಎಂದು ಹೇಳಿದರು.
ಆ ನಿಟ್ಟಿನಲ್ಲಿ ಶರಣಾಗುವ ನಕ್ಸಲೀಯರಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಆದರೆ ಸದ್ಯದ ಸ್ಥಿತಿಯಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸುವುದಿಲ್ಲ ಎಂದರು. ಮುಂದಿನ ಒಂದೂವರೆ ತಿಂಗಳೊಳಗೆ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದರು.
ಅಲ್ಲದೇ ಚಿಕ್ಕಮಗಳೂರು, ಉಡುಪಿ ಹಾಗೂ ಕುಂದಾಪುರ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ನಕ್ಸಲೀಯರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದರು.
|