ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಪತನ ಮತ್ತು ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಸಾಕ್ಷಿಯಾಗಿದ್ದ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರು ಎರಡು ವರ್ಷಗಳನ್ನು ಪೂರ್ಣಗೊಳಿಸುವ ಮೊದಲೇ ಸ್ಥಾನದಿಂದ ನಿರ್ಗಮಿಸುತ್ತಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಎಡೆ ಮಾಡಿಕೊಟ್ಟಿದೆ.
ಹಠಾತ್ ಬೆಳವಣಿಗೆಯ ಹಿಂದೆ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರ ಪಾತ್ರವೇ ಇರಬೇಕು ಎಂಬ ದಟ್ಟ ಅನುಮಾನ ಇದೀಗ ಬಿಜೆಪಿ ಪಾಳಯದಲ್ಲಿ ಮೂಡಿದೆ. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಸರ್ಕಾರದ ವೇಗವನ್ನು ನಿಯಂತ್ರಿಸಲು ಕ್ರಿಯಾಶೀಲ ರಾಜ್ಯಪಾಲರ ಅಗತ್ಯವಿದೆ ಎಂದು ಹೈಕಮಾಂಡ್‌ಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಈ ನಡುವೆ 82 ವರ್ಷ ವಯಸ್ಸಿನ ಠಾಕೂರ್ ಅವರು ವೈಯಕ್ತಿಕ ಕಾರಣಗಳಿಂದ ಉತ್ತರ ಭಾರತದ ಯಾವುದಾದರೊಂದು ರಾಜ್ಯಕ್ಕೆ ವರ್ಗಾಯಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು. ಇದಕ್ಕಾಗಿ ಜೂನ್ ತಿಂಗಳಲ್ಲಿ ಮೂರು ಬಾರಿ ದೆಹಲಿಗೆ ತೆರಳಿದ್ದರು.
ಇದೇ ವೇಳೆ ಠಾಕೂರ್ ನಿರ್ಗಮನದ ಬಗ್ಗೆ ಎರಡು ದಿನಗಳ ಮುಂಚೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ತಿಳಿದಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಖುದ್ದು ದೂರವಾಣಿ ಮೂಲಕ ವಿಷಯ ತಿಳಿಸಿದ್ದರು ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ನಮ್ಮ ಸರ್ಕಾರಕ್ಕೆ ತುಂಬು ಸಹಕಾರ ನೀಡಿದ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ. |