ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತ ವೈಖರಿ ವಿರುದ್ಧ ಕಿಡಿಕಾರಿರುವ ವಿಧಾವಪರಿಷತ್ ಪ್ರತಿಪಕ್ಷದ ನಾಯಕ ವಿ.ಎಸ್.ಉಗ್ರಪ್ಪ, ಮುಖ್ಯಮಂತ್ರಿಗಳು ತುಘಲಕ್‌ನಂತೆ ವರ್ತಿಸುತ್ತಿದ್ದಾರೆ ಎಂದು ಆಪಾದಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳನ್ನು, ಭ್ರಷ್ಟಾಚಾರವನ್ನು ಮುಚ್ಚಿ ಹಾಕಲೆಂದೇ ಸರ್ಕಾರ ಪ್ರತಿಪಕ್ಷಗಳ ಬಾಯಿಗೆ ಬೀಗ ಹಾಕುವ ಯತ್ನ ನಡೆಸುತ್ತಿದೆ ಎಂದು ದೂರಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರು ಅಧಿಕಾರಿಗಳೊಂದಿಗೆ ಸಭೆ ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿರುವ ಯಡಿಯೂರಪ್ಪ ಮತ್ತು ಸರ್ಕಾರದ ಕ್ರಮವನ್ನು ಖಂಡಿಸಿದರು. ಪ್ರತಿಪಕ್ಷದಲ್ಲಿದ್ದಾಗ ಯಡಿಯೂರಪ್ಪ ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡುತ್ತಿದ್ದರು ಎಂದು ಹೇಳಿದರು. ಆದರೆ ಇಂತಹ ಆದೇಶ ಹೊರಡಿಸುವ ಮೂಲಕ ಪ್ರಸ್ತುತ ಅದೇ ಪ್ರಜಾಪ್ರಭುತ್ವವನ್ನು ಸಮಾಧಿ ಮಾಡಲು ಹೊರಟಿದ್ದಾರೆ ಎಂದು ತಿರುಗೇಟು ನೀಡಿದರು.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ತಾವು ಎಲ್ಲಿಯೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಕಡತಗಳನ್ನು ಕೇಳಿಲ್ಲ. ಬದಲಿಗೆ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮಾತ್ರ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದರು. |