ವಾಹನ ದಟ್ಟಣೆಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಇನ್ನು ಮುಂದೆ ನಗರದಲ್ಲಿ ಹೊಸ ಆಟೋ ಹಾಗೂ ಪರ್ಮಿಟ್‌ಗಳಿಗೆ ಪರವಾನಿಗೆ ನೀಡದಿರುವಂತೆ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಸಚಿವರು, ಅಧಿಕಾರಿಗಳ ಚಿಂತನ-ಮಂಥನ-2 ಸಭೆಯ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಹೊಸ ರಿಕ್ಷಾಗಳಿಗೆ ನಿರ್ಬಂಧ ಹೇರಲು ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.
ಅಲ್ಲದೇ ವರ್ಗಾವಣೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಮಾಡಲಾಗುವುದು. ಇದನ್ನು ಎಲ್ಲಾ ಇಲಾಖೆಗಳಿಗೂ ವಿಸ್ತರಿಸಲಾಗುವುದು ಎಂದರು. ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಡೆಸಿದ ಚಿಂತನ-ಮಂಥನ ಸಭೆ ತುಂಬಾ ಪರಿಣಾಮ ಬೀರಿದ್ದು, ಆ ನಿಟ್ಟಿನಲ್ಲಿ ಪ್ರತಿ ಇಲಾಖೆಯಲ್ಲಿಯೂ ಮೂರು ತಿಂಗಳಿಗೊಮ್ಮೆ ಇಂತಹ ಸಭೆ ನಡೆಸಲು ಸೂಚಿಸಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ಬಜೆಟ್ ಕಾರ್ಯಕ್ರಮಗಳ ಅನುಷ್ಠಾನ, ಅಭಿವೃದ್ಧಿ ಕಾರ್ಯಕ್ರಮ ತ್ವರಿತ ಜಾರಿ ಬಗ್ಗೆ ಮುಖ್ಯಮಂತ್ರಿಗಳು ಕಳೆದ ಮೂರು ದಿನಗಳಿಂದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರ ತಂಡಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ್ದರು. ನಂತರ ಶುಕ್ರವಾರ ಸಂಜೆ ಮತ್ತು ಶನಿವಾರ ಒಟ್ಟಾಗಿ ಎಲ್ಲಾ ಸಚಿವರು ಹಾಗೂ ಅವರ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದರು.
ಈ ರೆಸಾರ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಭಾಗವಹಿಸಿದ್ದರು. ಸಭೆ ಮುಕ್ತಾಯದ ನಂತರ ಶನಿವಾರ ರಾತ್ರಿ ಅಧಿಕಾರಿಗಳು ಹಾಗೂ ಸಚಿವರ ತಂಡ ನಗರಕ್ಕೆ ವಾಪಸ್ ಆದ ಬಳಿಕ, ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಕಳೆದ ವರ್ಷ ಈ ಚಿಂತನ-ಮಂಥನ ಸಭೆ ಬನ್ನೇರುಘಟ್ಟ ರಸ್ತೆಯ ಐಐಎಂನಲ್ಲಿ ನಡೆದಿದ್ದು, ಈ ಬಾರಿ ರೆಸಾರ್ಟ್‌ನಲ್ಲಿ ನಡೆದಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದವು. |