ಕೊಡಗು ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕೊಡಗು ಸೇರಿದಂತೆ 10 ಹೊಸ ರಾಜ್ಯಗಳ ರಚನೆಗಾಗಿ ಕೇಂದ್ರದ ಹೋಗಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕೊಡಗನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಯೋಜನೆಯಿಲ್ಲ. ಕೊಡಗು ಕರ್ನಾಟಕದ ಒಂದು ಭಾಗವಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮುಂಗಾರು ಮಳೆ ಮತ್ತೆ ಕಾಣಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದರಿಂದ ರೈತರು ನಿಟ್ಟುಸಿರು ಬಿಡಬಹುದು. ಅಲ್ಲದೆ, ಇದರಿಂದ ವಿದ್ಯುತ್ ಸಮಸ್ಯೆ ಕೂಡ ಬಗೆಹರಿಯಲಿದೆ ಎಂದು ಅವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. |