ಸರ್ಕಾರದ ಸೂಚನೆ ಉಲ್ಲಂಘಿಸಿ ಪ್ರತಿಪಕ್ಷಗಳ ನಾಯಕರು ಕರೆದಿದ್ದ ಸಭೆಗೆ ಹಾಜರಾಗಿರುವ ಅಧಿಕಾರಿಗಳಿಗೆ ಷೋಕಾಸ್ ನೋಟಿಸ್ ನೀಡಲು ಸರ್ಕಾರ ಮುಂದಾಗಿದೆ.
ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷಗಳ ನಾಯಕರು ಕರೆಯುವ ಸಭೆಗೆ ಯಾವುದೇ ಅಧಿಕಾರಿಗಳು ಭಾಗವಹಿಸದಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರೂ ಕೆಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ.
ಸರ್ಕಾರ ಹೊರಡಿಸಿರುವ ಸುತ್ತೋಲೆ ತಿರಸ್ಕರಿಸಿ ಪ್ರತಿಪಕ್ಷಗಳ ನಾಯಕರಾದ ಸಿದ್ದರಾಮಯ್ಯ ಮತ್ತು ವಿ.ಎಸ್.ಉಗ್ರಪ್ಪನವರು ಕರೆದಿದ್ದ ಸಭೆಗೆ ಹಾಜರಾಗಿರುವ ಅಧಿಕಾರಿಗಳಿಗೆ ಷೋಕಾಸ್ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಪ್ರತಿಪಕ್ಷಗಳ ನಾಯಕರು ಕರೆಯುವ ಸಭೆಗೆ ಭಾಗವಹಿಸುವ ಅಗತ್ಯವಿಲ್ಲ ಎಂದು ನಿಯಮಾವಳಿಗಳಲ್ಲಿ ಸ್ಪಷ್ಟಪಡಿಸಲಾಗಿದೆ. ನಿಯಮಾವಳಿ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ. |