ರಾಜ್ಯದಲ್ಲಿ ಮಳೆ ಕೊರತೆ ಆಗಿದ್ದರೂ ರೈತರು ಧೃತಿಗೆಡುವ ಅಗತ್ಯವಿಲ್ಲ, ಎಲ್ಲ ರೀತಿಯ ಸಹಾಯ ನೀಡಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಗೃಹ ಕಚೇರಿ ಕಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ದಿನಗಳಲ್ಲಿ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಹವಾಮಾನ ತಜ್ಞರು ಸಹ ಇದನ್ನು ದೃಢಪಡಿಸಿದ್ದಾರೆ ಎಂದರು.
ಹಿಂದುಳಿದ ವರ್ಗಗಳ ಸಮೀಕ್ಷೆ ನಡೆಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹೊಗೇನಕಲ್ ವಿವಾದವನ್ನು ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳಲು ಸರ್ಕಾರ ಪ್ರಯತ್ನ ನಡೆಸಿದೆ. ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಅವರು ಹೇಳಿದರು.
ಅಲ್ಲದೇ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದೆ ಜೆ.ಶಾಂತಾ ಜಾತಿ ಪ್ರಮಾಣ ಪತ್ರದ ಬಗ್ಗೆ ವಿರೋಧ ಪಕ್ಷಗಳ ಮುಖಂಡರು ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದರು. |