ರೈಲ್ವೆ ಇಲಾಖೆಯಲ್ಲಿ ಖಾಲಿಯಾಗಿರುವ ಹುದ್ದೆಗಳನ್ನು ತುಂಬುವಾಗ ಕನ್ನಡಿಗರಿಗೆ ಅನ್ಯಾಯವಾಗದಂತೆ ಪಾರದರ್ಶಕವಾಗಿ ನೇಮಕಾತಿ ಮಾಡಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆ ಇಡೀ ರಾಷ್ಟ್ರಕ್ಕೆ ಅನ್ವಯವಾಗುವುದರಿಂದ ಕನ್ನಡಿಗರಿಗೆ ಎಲ್ಲ ಹುದ್ದೆಗಳು ಸಿಗಬೇಕು ಎಂಬುದು ಕಷ್ಟದಾಯಕವಾದ ಸಂಗತಿ. ಇಲ್ಲಿಯವರೆಗೆ ಕನ್ನಡಿಗರಿಗೆ ಆಗಿರುವ ಅನ್ಯಾಯ ಮುಂದೆ ನಡೆಯದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ರೈಲ್ವೆಯನ್ನು ಯಾವೊಂದು ರಾಜ್ಯಕ್ಕೂ ಸೀಮಿತಗೊಳಿಸಲು ಸಾಧ್ಯವಿಲ್ಲ. ರೈಲ್ವೆ ಇಲಾಖೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ನಡೆಸಿದರೆ ಶೇ.60 ರಷ್ಟು ಕನ್ನಡಿಗರು ಮೇರಿಟ್ ಆಧಾರದ ಮೇಲೆ ಆಯ್ಕೆಯಾಗುವ ಭರವಸೆ ನನಗೆ ಇದೆ ಎಂದು ಅವರು ಹೇಳಿದರು. |