ಕಳೆದ ಐದು ದಿನಗಳಿಂದ ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ತತ್ತರಿಸಿದ್ದು, ಕೆಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.
ಮಂಗಳೂರು ಸಮೀಪದ ದಂಬೆಲ್ ಎಂಬಲ್ಲಿ ಬುಧವಾರ ಬೆಳಿಗ್ಗೆ ಹಾವೇರಿಯ ಹಿರಿಯ (39) ಎಂಬವರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಮಳೆ-ಗಾಳಿಗೆ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 8ಕ್ಕೆ ಏರಿದೆ.
74.72 ಲಕ್ಷ ರೂ. ಮೌಲ್ಯದ ಆಸ್ತಿ ಹಾನಿಯಾಗಿದೆ. ಒಂದು ವಾರದಿಂದ ಬಿರುಸುಗೊಂಡಿರುವ ಮಳೆಗೆ ಜಿಲ್ಲೆಯ ಸುಮಾರು 267 ಮನೆಗಳು ಭಾಗಶಃ ಹಾನಿಯಾಗಿದೆ. ಮಳೆಯಿಂದಾಗಿ ರಸ್ತೆ ಕುಸಿತ, ಕಂಬ ಮುರಿತ ಹೀಗೆ ಒಟ್ಟು 45 ಲಕ್ಷ ರೂ. ಮೌಲ್ಯದ ಆಸ್ತಿಗಳಿಗೆ ಹಾನಿ ಸಂಭವಿಸಿದೆ.
ಈ ಮಧ್ಯೆ ಮಳೆ ಪರಿಹಾರ ಕಾರ್ಯ ಭರದಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ಜನರ ತುರ್ತು ನೆರವಿಗಾಗಿ ಮೂರು ಕಡೆಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೇಯರ್ ಶಂಕರ ಭಟ್ ಮತ್ತು ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್ ಅವರು ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ನೇತ್ರಾವತಿ ಮತ್ತು ಗುರುಪುರ ನದಿಗಳು ತುಂಬಿ ಹರಿಯುತ್ತಿದ್ದು, ಯಾವುದೇ ಅಪಾಯ ಎದುರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಶಾಲಾ ಕಾಲೇಜುಗಳಿಗೆ ಬುಧವಾರವೂ ರಜೆ ಸಾರಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಹಾಗೂ ಆಸ್ತಿ ಪಾಸ್ತಿ ನಷ್ಟಕ್ಕೆ ಪ್ರಕೃತಿ ವಿಕೋಪ ಪರಿಹಾರದಡಿ ಸೂಕ್ತ ಪರಿಹಾರ ನೀಡಲಾಗುವುದು. ಅಲ್ಲದೆ, ತುರ್ತು ಪರಿಹಾರ ಕಲ್ಪಿಸಲು ಮುಖ್ಯಮಂತ್ರಿ ನಿನ್ನೆ 2 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್ ತಿಳಿಸಿದ್ದಾರೆ.
ಆದರೆ ಕೊಡಗು ಜಿಲ್ಲೆಯಲ್ಲಿ ವಾರದಿಂದ ಅಬ್ಬರಿಸಿದ ಮಳೆ ಸ್ವಲ್ಪ ಬಿಡುವು ನೀಡಿದೆ. ಭಾಗಮಂಡಲ, ನಾಪೋಕ್ಲು, ಕರಡಿಗೋಡು ಮುಂತಾದೆಡೆ ಕಾವೇರಿ ನೀರಿನ ಮಟ್ಟ ಇಳಿದಿದೆ. ಮಡಿಕೇರಿ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯವಾಗುತ್ತಿದೆ. |