ಬಿಜೆಪಿ ಶಾಸಕರ ಕ್ಷೇತ್ರಗಳ ಅಹವಾಲುಗಳ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವರಿಗೆ ತಾಕೀತು ಮಾಡಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಹುತೇಕ ಶಾಸಕರು, ತಮ್ಮ ಕ್ಷೇತ್ರದ ಬಗ್ಗೆ ಕೆಲ ಹಿರಿಯ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲ ಅಧಿವೇಶನದ ಬಳಿಕ ನಿಗಮ-ಮಂಡಳಿಗಳ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟದ ಕೆಲ ಹಿರಿಯ ಸಚಿವರು ತಮ್ಮ ಕೆಲಸ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅಲ್ಲದೆ, ಕೆಲ ಸಚಿವರು ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿಕೊಂಡು, ಉಳಿದ ಶಾಸಕರ ಕ್ಷೇತ್ರಗಳಿಗೆ ಕಡಿಮೆ ಹಣ ನೀಡುವ ಮೂಲಕ ತಾರತಮ್ಯ ನೀಡುತ್ತಾರೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಈ ಬಾರಿಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಸೇರಿದಂತೆ ಹಲವು ಪ್ರಮುಖ ವಿಧೇಯಕಗಳು ಮಂಡನೆಯಾಗಲಿರುವುದರಿಂದ ಬಿಜೆಪಿ ಶಾಸಕರು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಶಾಸಕರಿಗೆ ಸೂಚನೆ ನೀಡಿದ್ದಾರೆ. |