ಕ್ಯಾತಮಾರನಹಳ್ಳಿ ಗಲಭೆಯ ಹಿಂದೆ ವ್ಯವಸ್ಥಿತವಾದ ಷಡ್ಯಂತ್ರ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ವಿಧಾನಮಂಡಲದಲ್ಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಸರ್ಕಾರ ಶಾಂತಿ ಸುವ್ಯವಸ್ಥೆ ಕದಡಲು ಬಯಸುವುದಿಲ್ಲ. ಆದರೆ ಸದರಿ ಪ್ರಕರಣದಲ್ಲಿ ಸುಮಾರು 10 ಜಿಲ್ಲೆಗಳಿಂದ ಸಾವಿರಾರು ಮಂದಿ ಭಾಗಿಯಾಗಿದ್ದರು ಎಂಬುದು ತಿಳಿದು ಬಂದಿದೆ. ಹೊರಗಡೆಯಿಂದ ಬಂದವರು ಮೈಸೂರಿನಲ್ಲಿ ಗಲಭೆ ನಡೆಸಿದ್ದಾರೆ ಎಂದು ಅವರು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಅಲ್ಲದೆ, ಈಗಾಗಲೇ ಈ ಬಗ್ಗೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದರು.
ವಿಧಾನಪರಿಷತ್‌ನಲ್ಲಿ ಶುಕ್ರವಾರ ನಡೆದ ಅಧಿವೇಶದಲ್ಲಿ ನಿಯಮ 69ರ ಅಡಿಯಲ್ಲಿ ಮೈಸೂರು ಗಲಭೆ ಕುರಿತು ಚರ್ಚೆಗೆ ಅವಕಾಶ ಮಾಡಿಕೊಡಲಾಯಿತು. ಆದರೆ ಚರ್ಚೆ ಕಾವೇರಿದ ಹಿನ್ನೆಲೆಯಲ್ಲಿ ಹಾಗೂ ಮೈಸೂರಿನಲ್ಲಿ ಪರಿಸ್ಥಿತಿ ಸುಧಾರಿಸುವವರೆಗೂ ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವುದು ಬೇಡವೆಂದು ಸಭಾಧ್ಯಕ್ಷರು ಹೇಳಿದ ಹಿನ್ನೆಲೆಯಲ್ಲಿ ಚರ್ಚೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
|