ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ವರದಿಯ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಕೊನೆಗೂ ಶಿಫಾರಸುಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ.
ಲೋಕಾಯುಕ್ತ ವರದಿ ಜಾರಿ ಕುರಿತಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ವರದಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಲೋಕಾಯುಕ್ತರಿಗೆ ಕಳುಹಿಸಿಕೊಟ್ಟಿದ್ದಾರೆ. ಇದರ ಜೊತೆಗೆ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರಿಗೆ ಮುಖ್ಯ ಕಾರ್ಯದರ್ಶಿಗಳು ಪತ್ರವೊಂದನ್ನು ಬರೆದಿದ್ದು, ಇದರಲ್ಲಿ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಲೋಕಾಯುಕ್ತರು ಮಾಡಿರುವ ಎಲ್ಲಾ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆಷ್ಟೇ ಅಕ್ರಮ ಗಣಿಗಾರಿಕೆ ಕುರಿತು ಕಳೆದ ಡಿಸೆಂಬರ್‌ನಲ್ಲಿ ಸಲ್ಲಿಸಿರುವ ವರದಿಯನ್ನು ಕಡೆಗಣಿಸಿರುವ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಶೀಘ್ರವೇ ಕ್ರಮ ಕೈಗೊಂಡಿದೆ.
ಈ ಕುರಿತು ಮಾಹಿತಿ ನೀಡಿರುವ ಲೋಕಾಯುಕ್ತ ನ್ಯಾ| ಸಂತೋಷ್ ಹೆಗ್ಡೆ, ತಮ್ಮ ವರದಿ ಜಾರಿ ಕುರಿತಂತೆ ಸರ್ಕಾರ ವಿವರವಾದ ವರದಿ ನೀಡಿದೆ. ಈ ವರದಿಯನ್ನು ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಿದ ಅಧಿಕಾರಿಗಳಿಗೆ ಕಳುಹಿಸಿಕೊಡಲಾಗಿದ್ದು, ಸೋಮವಾರದಂದು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ತಮ್ಮ ಅಭಿಪ್ರಾಯ ತಿಳಿಸಿರುವುದಾಗಿ ಹೇಳಿದ್ದಾರೆ. |