ಚರ್ಚ್ ಮೇಲಿನ ದಾಳಿ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ನೇಮಕಗೊಂಡಿರುವ ನ್ಯಾಯಮೂರ್ತಿ ಬಿ.ಕೆ. ಸೋಮಶೇಖರ ನೇತೃತ್ವದ ಆಯೋಗವು ಸರ್ಕಾರಕ್ಕೆ ಶೀಘ್ರವೇ ಮಧ್ಯಂತರ ವರದಿ ನೀಡಲು ನಿರ್ಧರಿಸಿದೆ.
ಈ ವಿಷಯವನ್ನು ಸ್ಪಷ್ಟಪಡಿಸಿದ ಬಿ.ಕೆ. ಸೋಮಶೇಖರ, ರಾಜ್ಯದ ಹಲವೆಡೆ ನಡೆದ ಚರ್ಚ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 250ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆಯೋಗವು ಡಿಸೆಂಬರ್ ಅಂತ್ಯದೊಳಗೆ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ನೀಡಲಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಯೋಗವು ನಿಗದಿತ ಅವಧಿಯಲ್ಲಿ ವರದಿ ಪೂರ್ಣಗೊಳಿಸಲು ನಿರ್ಧರಿದ್ದು, ತನಿಖೆಯ ಮೊದಲ ಮಧ್ಯಂತರ ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲು ಉದ್ದೇಶಿಸಿದೆ ಎಂದು ಹೇಳಿದ್ದಾರೆ.
ಆಯೋಗವು ಚರ್ಚ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಧರ್ಮ ಮತ್ತು ಕಾನೂನು ವಿಷಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ನ್ಯಾಯಾಂಗ ತನಿಖೆಗೆ ನೇಮಕಗೊಂಡ ಆಯೋಗವೊಂದು ಈ ರೀತಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದೆ ಎಂದು ಅವರು ತಿಳಿಸಿದರು. |