ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ಸಲ್ಲಿಸಿರುವ ವರದಿಯ ಅನುಷ್ಠಾನ ಕುರಿತಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರ ವರದಿ ಕುರಿತು ಸರ್ಕಾರ ಕಾಗದದ ಮೇಲೆ ಮಾತ್ರ ಕ್ರಮ ಕೈಗೊಂಡಿದೆ. ಆದರೆ ವಾಸ್ತವದಲ್ಲಿ ಅಕ್ರಮ ಗಣಿಗಾರಿಕೆ ನಿರಂತರವಾಗಿ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತರು ಸಲ್ಲಿಸಿರುವ ವರದಿಯಲ್ಲಿ ಮಾಡಿರುವ ಶಿಫಾರಸುಗಳನ್ನು ಜಾರಿಗೆ ತರಲು ವಿವಿಧ ಇಲಾಖೆಗಳಿಗೆ ಆದೇಶ ನೀಡಲಾಗಿದೆ ಎಂದು ಸರ್ಕಾರ ತನ್ನ ಅನುಷ್ಠಾನ ವರದಿಯಲ್ಲಿ ಹೇಳಿದೆ. ಮೇಲ್ನೋಟಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರೂ, ಇದುವರೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಮಿನರಲ್ಸ್‌ನಲ್ಲಿ ನಡೆದಿರುವ ಅವ್ಯವಹಾರ ಕುರಿತು 10 ಅಧಿಕಾರಿಗಳಿಗೆ ಕೇವಲ ಷೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ತಾವು ಇಲ್ಲಿ 600 ಕೋಟಿ ರೂ.ಗಳಷ್ಟು ಹಣ ಸರ್ಕಾರಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದರೆ, ಸರ್ಕಾರ, ಕೇವಲ 140 ಕೋಟಿ ರೂ. ಮಾತ್ರ ನಷ್ಟವಾಗಿದೆ ಎಂದು ಹೇಳಿದೆ ಎಂದು ಆರೋಪಿಸಿದ್ದಾರೆ. |