ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುದಳ್ಳುರಿ ಸೇರಿದಂತೆ ಚರ್ಚ್‌ಗಳ ಮೇಲೆ ನಡೆಯುತ್ತಿರುವ ದಾಳಿಯ ಹಿಂದಿನ ಕಾರಣ ಕಂಡುಹಿಡಿಯುವಂತೆ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಕಳೆದ ವರ್ಷ ಚರ್ಚ್‌ಗಳ ಮೇಲಿನ ದಾಳಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಂದುವರಿಸುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಪಿ.ಡಿ.ದಿನಕರನ್ ಹಾಗೂ ನ್ಯಾ.ವಿ.ಜಿ.ಸಭಾಹಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರ ಪರ ವಕೀಲರು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕೋಮು ಗಲಭೆ ಮತ್ತು ಭಾನುವಾರ ಕೊಳ್ಳೇಗಾಲ ತಾಲೂಕಿನಲ್ಲಿ ಚರ್ಚ್ ಮೇಲೆ ದಾಳಿ ನಡೆಸಿದ ಪ್ರಕರಣವನ್ನು ಪ್ರಸ್ತಾಪಿಸಿ, ಸರ್ಕಾರ ಕೋಮು ಸಾಮರಸ್ಯ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್ ಜನರಲ್, ಕೆಲವೊಂದು ಪ್ರಕರಣಗಳು ರಾಜಕೀಯ ಪ್ರೇರಿತವಾಗಿಯೂ ನಡೆದಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಚರ್ಚ್ ಮೇಲಿನ ದಾಳಿ ಮತ್ತು ಕೋಮುಗಲಭೆ ಹಿಂದಿನ ಕಾರಣ ಕಂಡುಹಿಡಿಯುವಂತೆ ನ್ಯಾಯಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ. |