ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಒಂದು ವರ್ಷಗಳ ಕಾಲ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಹೊರಡಿಸಿದ್ದ ನಿಷೇಧ ಆದೇಶಕ್ಕೆ ಮಂಗಳವಾರ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.2001, 2002 ಹಾಗೂ 2003ರಲ್ಲಿ ಮಂಗಳೂರು ಹಾಗೂ ಜಿಲ್ಲೆಯ ವಿವಿಧೆಡೆ ಉದ್ರೇಕಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಶ್ರೀರಾಮಸೇನೆಯ ಮುತಾಲಿಕ್ ಅವರು ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಒಂದು ವರ್ಷಗಳ ಕಾಲ ಪ್ರವೇಶಿಸದಂತೆ ನಿಷೇಧ ಹೇರಿ ಮಾರ್ಚ್ 16ರಂದು ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.ಆದರೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಿರುವ ಜಿಲ್ಲಾಧಿಕಾರಿ ಕ್ರಮದ ವಿರುದ್ಧ ಮುತಾಲಿಕ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಯಾವುದೇ ವ್ಯಕ್ತಿ ಜಿಲ್ಲಾ ಪ್ರವೇಶವನ್ನು ನಿಷೇಧಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಇಲ್ಲ, ಇದು ಮೂಲಭೂತ ಹಕ್ಕಿನ ಉಲ್ಲಂಘನೆ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಮುತಾಲಿಕ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.ನಿಷೇಧ ಪ್ರಕರಣದ ಕುರಿತು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುತಾಲಿಕ್ ಪ್ರವೇಶ ನಿಷೇಧಕ್ಕೆ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದರು. |