ರಾಜ್ಯದ ಹಲವೆಡೆ ಮತ್ತೆ ವರುಣನ ಆರ್ಭಟ ಮುಂದುವರಿದಿದ್ದು, ಹಾಸನ, ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತನ್ನ ಪ್ರತಾಪ ತೋರಿದೆ. ಹಲವೆಡೆ ಬುಧವಾರವೂ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾಸನ ಜಿಲ್ಲೆಯ ಮೇಲೆನಾಡು ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಚುರುಕುಗೊಂಡಿದ್ದು, ಮಲೆನಾಡಿನಲ್ಲಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಬೀಳುತ್ತಿರುವುದರಿಂದ ತುಂಗಾ ಹಾಗೂ ಭದ್ರಾ ನದಿಗಳಲ್ಲಿ ಪ್ರವಾಹ ಹೆಚ್ಚಿದೆ. ಇದೇ ರೀತಿ ಮುಂದುವರಿದರೆ ನದಿಗಳು ಅಪಾಯ ಮಟ್ಟ ಮುಟ್ಟುವ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ ಈವರೆಗೆ 1.54 ಕೋಟಿ ರೂ. ಆಸ್ತಿ ಹಾನಿಯಾಗಿದೆ.
ಅಲ್ಲದೆ, ಶಿವಮೊಗ್ಗ ಜಿಲ್ಲೆಯಲ್ಲಿಯೂ ನದಿಗಳಲ್ಲಿ ನೀರಿನ ಮಟ್ಟ ಏರಿದೆ. 3 ದಿನ ಸ್ವಲ್ಪ ಬಿಡುವು ನೀಡಿದ್ದ ಮಳೆ ಮತ್ತೆ ಸುರಿಯಲು ಆರಂಭಿಸಿದೆ. ತೀರ್ಥಹಳ್ಳಿ ಮತ್ತಿತರ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ನೀರು ಹರಿದು ಬರುತ್ತಿದೆ. ಮುಂದಿನ ದಿನಗಳಲ್ಲಿ ಭಾರಿ ಮಳೆ ಬರುವ ಸಂಭವ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಹಾಲಿ ಇರುವ ರಕ್ಷಣಾ ಸಿಬ್ಬಂದಿ ಹೊರತಾಗಿ ನ್ಯಾಶನಲ್ ಡಿಸಾಸ್ಟರ್ ರೆಸ್ಪಾನ್ಸ್ ಪೋರ್ಸ್ ಕರೆಸಲಾಗಿದೆ. |