ಉಭಯ ಸದನಗಳು ಒಮ್ಮತದ ತೀರ್ಮಾನ ಕೈಗೊಂಡ 24 ತಾಸುಗಳಲ್ಲಿ ಕರ್ನಾಟಕ ಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಭ್ರಷ್ಟರ ರಕ್ಷಣೆಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಅಲ್ಲದೆ, ಲೋಕಾಯುಕ್ತಕ್ಕೆ ಅಧಿಕಾರ ನೀಡುವ ವಿಚಾರದಲ್ಲಿ ಅಧಿಕಾರಿಗಳ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ. ಎರಡು ಸದನಗಳು ಒಮ್ಮತದ ತೀರ್ಮಾನ ಕೈಗೊಂಡ ಒಂದು ದಿನದೊಳಗೆ ಲೋಕಾಯುಕ್ತರು ಬಯಸುವ ಸಂಪೂರ್ಣ ಅಧಿಕಾರವನ್ನು ನೀಡಲು ಬದ್ಧ ಎಂದು ಸ್ಪಷ್ಟಪಡಿಸಿದರು.
ಸ್ವಯಂ ಪ್ರೇರಣೆಯಿಂದ ತನಿಖೆ ನಡೆಸುವ, ವಿಚಾರಣೆಯ ಮೇಲ್ವಿಚಾರಣೆ ಅಧಿಕಾರ ಹಾಗೂ ಭ್ರಷ್ಟರ ವಿಚಾರಣೆ ನಡೆಸಿ ಶಿಕ್ಷೆ ವಿಧಿಸುವ ಅಧಿಕಾರಗಳನ್ನು ಲೋಕಾಯುಕ್ತರು ಕೋರಿದ್ದಾರೆ. ಈ ಅಧಿಕಾರಗಳನ್ನು ನೀಡಲು ಸರ್ಕಾರ ಹಿಂಜರಿಯುವುದಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದುವರೆಗೆ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದಿರುವ ಯಾವೊಬ್ಬ ಅಧಿಕಾರಿಯನ್ನೂ ರಕ್ಷಣೆ ಮಾಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. |