ಕರ್ನಾಟಕ ಗೃಹ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ರೂಪಾಯಿಗಳ ಭೂ ಹಗರಣದ ಬಗ್ಗೆ ಸಿಬಿಐ ಅಥವಾ ಲೋಕಾಯುಕ್ತರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಜೆಡಿಎಸ್, ಕಾಂಗ್ರೆಸ್ ಮುಖಂಡರು ಕಾಲ್ನಡಿಗೆಯಲ್ಲೇ ಜಾಥಾ ಮೂಲಕ ತೆರಳಿ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್‌ನ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರ ನೇತೃತ್ವದಲ್ಲಿ ವಿಧಾನ ಮಂಡಲದ ಎರಡೂ ಸದನಗಳ ಜೆಡಿಎಸ್, ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಖುದ್ದಾಗಿ ಭೇಟಿ ಮಾಡಿ ಈ ಮನವಿ ಸಲ್ಲಿಸಿದರು.
'ಕಾರ್ಯಾಂಗದ ಮುಖ್ಯಸ್ಥರಾಗಿರುವ ನೀವು ಗೃಹ ಮಂಡಳಿ ಹಗರಣದ ಬಗ್ಗೆ ಸಿಬಿಐ ಅಥವಾ ಲೋಕಾಯುಕ್ತರಿಂದ ತನಿಖೆ ಮಾಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯ, ಹಾಗೂ ಜೆಡಿಎಸ್‌ನ ದತ್ತ ತಿಳಿಸಿದರು.
ವಸತಿ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರು ಸೇರಿದಂತೆ ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು. |