ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಗಾದಿಗೆ ಅವಿರೋಧವಾಗಿ ಆಯ್ಕೆಯಾಗುವ ವಿಶ್ವಾಸ ತಮಗಿದೆ ಎಂದು ಬಳ್ಳಾರಿ ನಗರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಎಚ್.ಡಿ. ರೇವಣ್ಣ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆಗಳು ಕಡಿಮೆ ಇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಒಕ್ಕೂಟದ ನಿರ್ದೇಶಕರಲ್ಲಿ 16 ಮಂದಿ ಬಿಜೆಪಿ ಪರ ಇದ್ದಾರೆ. ಇವರಲ್ಲಿ 10 ನಿರ್ದೇಶಕರು ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. 3 ಮಂದಿಯನ್ನು ಸರ್ಕಾರ ನಾಮಕರಣ ಮಾಡಿದೆ. ರೇವಣ್ಣ ಸೇರಿದಂತೆ ಇಬ್ಬರು ಜೆಡಿಎಸ್ ಬೆಂಬಲಿಗರಿದ್ದಾರೆ. ಈ ನಿಟ್ಟಿನಲ್ಲಿ ತಾವು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೆಎಂಎಫ್ ಅನ್ನು ಗುಜರಾತ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ ಅವರು, ಸದ್ಯ ಕೆಎಂಎಫ್ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು. |