ಭಾಷಾ ಮಾಧ್ಯಮ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಮುಖಭಂಗ ಅನುಭವಿಸಿದೆ.
ಭಾಷಾ ಮಾಧ್ಯಮ ನೀತಿ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು, ಆಗಸ್ಟ್ ಅಂತಿಮ ವಾರಕ್ಕೆ ವಿಚಾರಣೆಯನ್ನು ನಿಗದಿಪಡಿಸಿದೆ. ಅಲ್ಲದೇ ಶಾಲೆಗಳನ್ನು ಮುಚ್ಚುವ ಆದೇಶ ನೀಡದಂತೆ ರಾಜ್ಯ ಸರ್ಕಾರಕ್ಕೆ ಸರ್ವೋಚ್ಚನ್ಯಾಯಾಲಯ ಸೂಚನೆ ನೀಡಿದೆ.
ಭಾಷಾ ಮಾಧ್ಯಮ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಗೆ ಸುಪ್ರೀಂಕೋರ್ಟ್ ಜುಲೈ 14ರಂದು ತಾತ್ಕಾಲಿಕ ತಡೆಯಾಜ್ಞೆ ನೀಡುವ ಮೂಲಕ ರಾಜ್ಯ ಸರ್ಕಾರ ತಾತ್ಕಾಲಿಕ ನಿರಾಳತೆ ಕಂಡಿತ್ತು.
ನ್ಯಾಯಾಂಗ ನಿಂದನೆ ವಿಚಾರಣೆ ಹೈಕೋರ್ಟ್‌ನಲ್ಲಿ ಜು.16ರಿಂದ ಆರಂಭವಾಗಬೇಕಿತ್ತು. ಆದರೆ ಇದೀಗ ಹೈಕೋರ್ಟ್ ವಿಚಾರಣೆಗೆ ಸುಪ್ರೀಂಕೋರ್ಟ್ ಜು.24ರವರೆಗೆ ಮುಂದೂಡಿ ತಡೆಯಾಜ್ಞೆ ನೀಡಿತ್ತು.
ಭಾಷಾ ಮಾಧ್ಯಮ ವಿವಾದ ಕುರಿತಂತೆ ರಾಜ್ಯ ಸರ್ಕಾರ ನ್ಯಾಯಾಂಗ ನಿಂದನೆಗೆ ಗುರಿಯಾಗಿ ಹೈಕೋರ್ಟ್‌ನಲ್ಲಿ ತೀವ್ರ ಮುಖಭಂಗ ಅನುಭವಿಸಿತ್ತು. ಅದರಿಂದ ಪಾರಾಗಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಭಾಷಾ ಮಾಧ್ಯಮ ನೀತಿ ಕುರಿತಂತೆ ಹೈಕೋರ್ಟ್ ಪೂರ್ಣಪೀಠ ನೀಡಿದ ತೀರ್ಪನ್ನು ಅನುಷ್ಠಾನಗೊಳಿಸಲು ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಕ್ಕೆ ಸೋಮವಾರದವರೆಗೆ ಕಾಲಾವಕಾಶ ನೀಡಿತ್ತು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಆರೋಪ ನಿಗದಪಡಿಸುವುದಾಗಿ ಹೇಳಿತ್ತು.
ಈ ಹಿನ್ನೆಲೆಯಲ್ಲಿ ಭಾಷಾ ಮಾಧ್ಯಮ ನೀತಿ ಅನುಷ್ಠಾನಗೊಳಿಸಲು ಮೀನಮೇಷ ಎಣಿಸಿ ರಾಜ್ಯ ಸರ್ಕಾರ ನ್ಯಾಯಾಂಗ ನಿಂದನೆಗೆ ಗುರಿಯಾಗಿತ್ತು. ಪ್ರಕರಣದ ವಿಚಾರಣೆ ಜು.16ರಿಂದ ಆರಂಭವಾಗಬೇಕಿತ್ತು. ಆದರೆ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ನಿರ್ಧರಿಸಿದ ರಾಜ್ಯ ಸರ್ಕಾರ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಇದೀಗ ಸುಪ್ರೀಂಕೋರ್ಟ್ ಕೂಡ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸುವ ಮೂಲಕ ರಾಜ್ಯ ಸರ್ಕಾರ ಮತ್ತೆ ಇಕ್ಕಟ್ಟಿಗೆ ಸಿಲುಕಿದೆ. |