ಬೆಂಗಳೂರು ಮಹಾನಗರ ಪಾಲಿಕೆ ಘನ ತ್ಯಾಜ್ಯ ವಿಲೇವಾರಿಯಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಂತರ ರೂ. ಅವ್ಯವಹಾರದ ಬಗ್ಗೆ ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಮೂರು ತಿಂಗಳ ಅವಧಿಯಲ್ಲಿ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ತಿನಲ್ಲಿ ಬುಧವಾರ ಮಾತನಾಡಿದ ಅವರು, ತನಿಖೆ ನಡೆಸುವುದಲ್ಲದೆ ತಕ್ಷಣ ಹಾಲಿ ಗುತ್ತಿಗೆ ರದ್ದು ಪಡಿಸಿ ಹೊಸ ಗುತ್ತಿಗೆ ನೀಡುವುದಾಗಿ ಹೇಳಿದರು.
ಪ್ರತಿಪಕ್ಷ ನಾಯಕ ವಿ.ಎಸ್. ಉಗ್ರಪ್ಪ ಅವರು ನಿಯಮ 68ರ ಅಡಿಯಲ್ಲಿ ಹಗರಣವನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಇದಕ್ಕೆ ಸಾಥ್ ನೀಡಿದ ಪ್ರತಿಪಕ್ಷಗಳ ಮುಖಂಡರು ಈ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಆದರೆ ಇದನ್ನು ವಿರೋಧಿಸಿದ ಮುಖ್ಯಮಂತ್ರಿಗಳು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು. ನ್ಯಾಯಾಧೀಶರನ್ನು ತಕ್ಷಣವೇ ನೇಮಕ ಮಾಡಿಕೊಳ್ಳಲಾಗುವುದು. ಈ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಸ ವಿಲೇವಾರಿ ಗುತ್ತಿಗೆಯನ್ನು ರದ್ದುಗೊಳಿಸಿದರೆ ಹೊಸ ಸಮಸ್ಯೆ ಉದ್ಭವವಾಗುತ್ತದೆ. ಆದ್ದರಿಂದ ಪರ್ಯಾಯ ವ್ಯವಸ್ಥೆ ಆಗುವವರೆಗೆ ಹಾಲಿ ವ್ಯವಸ್ಥೆಯನ್ನೇ ಮುಂದುವರಿಸಿಕೊಂಡು ಹೋಗಲಾಗುವುದು ಎಂದು ಅವರು ತಿಳಿಸಿದ್ದಾರೆ. |