ಮುಂದಿನ ತಿಂಗಳು ನಡೆಯಲಿರುವ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜಾತ್ಯತೀತ ಜನತಾದಳವು ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಈ ಸಂಬಂಧ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಯಿತು.
ಕೊಳ್ಳೆಗಾಲದಿಂದ ಮಾಜಿ ಶಾಸಕ ಬಾಲರಾಜ್ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದ್ದು, ರಾಮನಗರ ಕ್ಷೇತ್ರದಲ್ಲಿ ರಾಜು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಉಳಿದಂತೆ ಚನ್ನಪಟ್ಟಣದಲ್ಲಿ ಅಶ್ವಥ್ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಇವರು ಕಳೆದ ಚುನಾವಣೆಯಲ್ಲಿ ಯೋಗೇಶ್ವರ್ ವಿರುದ್ಧ ಕೆಲವೇ ಮತಗಳಿಂದ ಪರಾಭವಗೊಂಡಿದ್ದರು.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದ್ದರೂ, ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಕೈ ಜೋಡಿಸಲು ಜೆಡಿಎಸ್ ನಿರ್ಧರಿಸಿದ್ದು, ಇದಕ್ಕಾಗಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
|