ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಲಿದ್ದು, ಇದರಲ್ಲಿ ರಾಮನಗರ ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆಯ ದಿನವಾಗಿದೆ.
ಐದೂ ಕ್ಷೇತ್ರಗಳ ಪೈಕಿ ಸಾಕಷ್ಟು ಕುತೂಹಲ ಕೆರಳಿಸಿರುವುದು ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು. ಈ ಜೆಡಿಎಸ್ ಅಭ್ಯರ್ಥಿ ಆಯ್ಕೆ ಆಧಾರದ ಮೇಲೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸುವ ಇರಾದೆ ಹೊಂದಿದೆ. ಈ ಕ್ಷೇತ್ರದಲ್ಲಿ ಖ್ಯಾತ ನಟರಾದ ರೆಬೆಲ್ ಸ್ಟಾರ್ ಅಂಬರೀಶ್ ಅಥವಾ ಬಿ.ಸರೋಜಾದೇವಿ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಬಿಜೆಪಿ ಚಿಂತನೆ ನಡೆಸಿದೆ.
ಈ ವೇಳೆ ಕಾಂಗ್ರೆಸ್ಸಿನ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಮುಂಚಿತವಾಗಿಯೇ ನಾಮಪತ್ರ ಸಲ್ಲಿಸಿ ತಮ್ಮ ಪಕ್ಷದ ನಾಯಕರನ್ನು ಗೊಂದಲಕ್ಕೆ ಸಿಲುಸಿಕಿಸಿದ್ದಾರೆ.
ಏತನ್ಮಧ್ಯೆ ತಮ್ಮ ಕುಟುಂಬದ ಸದಸ್ಯರನ್ನು ಅಖಾಡಕ್ಕೆ ಇಳಿಸುವುದಿಲ್ಲ ಎಂದು ಘೋಷಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ತಮ್ಮ ಉತ್ತರಾಧಿಕಾರಿ ಯಾರು ಎಂಬುದರ ಗುಟ್ಟನ್ನು ಇನ್ನೂ ಬಿಟ್ಟುಕೊಟ್ಟಿಲ್ಲ. ಪಕ್ಷದ ವರಿಷ್ಠರಾದ ದೇವೇಗೌಡರು, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರೊಬ್ಬರಿಗೆ ಟಿಕೆಟ್ ನೀಡುವ ಬಗ್ಗೆ ಒಲವು ಹೊಂದಿದ್ದರೂ ಕೂಡ ಕುಮಾರಸ್ವಾಮಿ ಅವರು ಕೈಗೊಳ್ಳುವ ತೀರ್ಮಾನವೇ ಅಂತಿಮವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. |