ಭಾಷಾ ಮಾಧ್ಯಮ ನೀತಿಗೆ ಸಂಬಂಧಪಟ್ಟಂತೆ ಎದ್ದಿರುವ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಸ್ಯೆ ಕೇವಲ ಒಂದು ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ರಾಜ್ಯಗಳಿಗೂ ಇದು ಅನ್ವಯವಾಗುವುದರಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ಮಾತೃಭಾಷಾ ಮಾಧ್ಯಮ ಶಿಕ್ಷಣದ ಮಹತ್ವ ಹಾಗೂ ರಾಜ್ಯ ಸರ್ಕಾರದ ನಿಲುವಿನ ಕುರಿತು ಆಗಸ್ಟ್ ಕೊನೆಯ ವಾರದಲ್ಲಿ ನಡೆಯುವ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ಗೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ನಿಟ್ಟಿನಲ್ಲಿ ಭಾಷಾ ತಜ್ಞರು, ಸಾಹಿತಿಗಳು ಮತ್ತು ಅನುಭವಿಗಳೊಂದಿಗೆ ಚರ್ಚಿಸಿ, ಅವರ ಸಲಹೆ ಸೂಚನೆಗಳನ್ನು ಪಡೆಯಲಾಗುವುದು. ಅಲ್ಲದೆ, ಸುಪ್ರೀಂಕೋರ್ಟ್‌ಗೆ ವಿಚಾರಣೆ ವೇಳೆ ಮಂಡಿಸಬೇಕಾದ ನಿಲುವಿನ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಸುಪ್ರೀಂಕೋರ್ಟ್ ತೀರ್ಮಾನವೇ ಅಂತಿಮವಾಗಿದ್ದು, ಅದನ್ನು ಒಪ್ಪಿಕೊಳ್ಳಲೇ ಬೇಕಾಗಿದೆ ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದರು. |