ಭಾರೀ ಮಳೆಗೆ ಲಿಂಗರಾಜಪುರ ಮೋರಿಯಲ್ಲಿ ಕೊಚ್ಚಿಹೋದ ಬಾಲಕ ಅಭಿಷೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಹೈಕೋರ್ಟ್, ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅಭಿಷೇಕ್ ಮಳೆ ನೀರಿನಲ್ಲಿ ಕೊಚ್ಚಿಹೋದ ಪ್ರಕರಣ ದಿಗ್ಭ್ರಮೆ ಮೂಡಿಸಿದೆ. ಬೆಂಗಳೂರು ಮಾತ್ರವಲ್ಲ, ರಾಜ್ಯದ ಯಾವ ಭಾಗದಲ್ಲೂ ಇಂತಹ ಘಟನೆ ಮರುಕಳಿಸಬಾರದು. ಅದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶಿ ಸೂತ್ರ ಪ್ರಕಟಿಸಿ ಬಿಬಿಎಂಪಿ ಆಯುಕ್ತರು, ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡುವಂತೆ ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿದೆ.
ಬಾಲಕ ಅಭಿಷೇಕ್ ಪ್ರಕರಣಕ್ಕೆ ಬಿಬಿಎಂಪಿ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಸಿಟಿಜನ್ಸ್ ಆಕ್ಷನ್ ಗ್ರೂಪ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಗೊಳಿಸಿದ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಮತ್ತು ನ್ಯಾ.ವಿ.ಜಿ.ಸಭಾಹಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಈ ಕುರಿತು ಅರ್ಜಿದಾರರು ಸಲ್ಲಿಸುವ ಪ್ರಸ್ತಾವನೆಯನ್ನು ಪರಿಗಣಿಸಿ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸುವಂತೆ ನ್ಯಾಯಪೀಠ ಸಲಹೆ ಮಾಡಿದೆ.