ರಾಜ್ಯದಲ್ಲಿನ ಆಡಳಿತಾರೂಢ ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದು, ಸರ್ಕಾರಕ್ಕೆ ಪಾರದರ್ಶಕತೆ ಎಂಬುದೇ ಇಲ್ಲ ಎಂದು ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಚ್‌ಬಿ ಹಗರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಮೀನಮೇಷ ಎಣಿಸುತ್ತಿದೆ. ಸರ್ಕಾರವೇ ಭ್ರಷ್ಟಚಾರಕ್ಕೆ ಕುಮ್ಮಕ್ಕು ನೀಡುತ್ತಿರುವುದರಿಂದ ನಾವು ಈ ಸರ್ಕಾರದಿಂದ ಪಾರದರ್ಶಕತೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧಿವೇಶನ ಸಂದರ್ಭದಲ್ಲಿ ಪ್ರತಿಪಕ್ಷಗಳು ಸರಿಯಾಗಿ ಕೆಲಸ ಮಾಡಿಲ್ಲ. ಪ್ರಜಾಪ್ರಭುತ್ವದಲ್ಲಿ ಅವರಿಗೆ ದತ್ತವಾಗಿರುವ ಕರ್ತವ್ಯವನ್ನು ಅವರು ನಿರ್ವಹಿಸಲಿಲ್ಲ ಎಂಬ ಮುಖ್ಯಮಂತ್ರಿಗಳ ಟೀಕೆಗೆ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸದನದಲ್ಲಿ ನಾವು ಕಾಲಹರಣ ಮಾಡಿಲ್ಲ. ನಮ್ಮ ಕರ್ತವ್ಯವನ್ನು ನಾವು ಸಮರ್ಥವಾಗಿಯೇ ನಿರ್ವಹಿಸಿದ್ದೇವೆ. ಅಲ್ಲದೇ ಇನ್ನೂ ಅನೇಕ ಹಗರಣಗಳ ವಿಷಯದ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದರು.
ಮುಂದಿನ ಅಧಿವೇಶನದಲ್ಲೂ ನಮಗೆ ಸರಿಯಾದ ನ್ಯಾಯ ಸಿಗದಿದ್ದಲ್ಲಿ ನಾವು ಲೋಕಾಯುಕ್ತ ಮತ್ತು ರಾಜ್ಯಪಾಲರ ಮೊರೆ ಹೋಗುವುದಾಗಿ ಎಚ್ಚರಿಸಿದರು.
ಗುರುವಾರ ಶಿಕಾರಿಪುರ ತಾಲೂಕು ಅಂಬ್ಲಿಗೊಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರತಿಪಕ್ಷಗಳ ಕಾರ್ಯವೈಖರಿ ವಿರುದ್ಧ ಹರಿಹಾಯ್ದಿದ್ದರು. ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷಗಳು ಕೇವಲ ಗೊಂದಲ ಮಾಡಿಸುವ ಕೆಲಸ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.