ರಾಜ್ಯದಲ್ಲಿ ವಿದ್ಯುತ್ ಅಭಾವದ ಕುರಿತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶೀಘ್ರವೇ ಉನ್ನತಾಧಿಕಾರಿಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಕೊರತೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮೂರ್ನಾಲ್ಕು ದಿನಗಳಲ್ಲಿ ಇಂಧನ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಪಕ್ಷದಲ್ಲಿ ಭಿನ್ನಮತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲರೂ ಒಟ್ಟಾಗಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಎದುರಿಸುತ್ತೇವೆ ಎಂದರು.
ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಉಪಚುನಾವಣೆ ನಡೆಯುತ್ತಿರುವ ಐದೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಗುವುದು ಎಂದು ಹೇಳಿದರು.