ಆಗೋಸ್ಟ್ 18ರಂದು ನಡೆಯಲಿರುವ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಚಾರ ತಾರಕಕ್ಕೇರಿದೆ. ಗೋವಿಂದರಾಜನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿರುವುದರಿಂದ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.
ಇನ್ನುಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ. ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದರು. ರಾಮನಗರ ಜೆಡಿಎಸ್ ವಶದಲ್ಲಿತ್ತು. ಈ ಸ್ಥಾನಗಳನ್ನು ಮರಳಿ ಪಡೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಹರಸಾಹಸ ನಡೆಸಿವೆ.
ಐದರಲ್ಲೂ ಗೆಲುವು ಸಾಧಿಸಲು ಹವಣಿಸುತ್ತಿರುವ ಆಡಳಿತಾರೂಢ ಬಿಜೆಪಿ ತಂತ್ರವನ್ನು ಮುಂದುವರಿಸಿದೆ. ಕಾಂಗ್ರೆಸ್ ಪಕ್ಷ ಪ್ರಚಾರದ ವೈಖರಿಯನ್ನು ಬದಲಿಸಿದೆ. ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಸಂಪುಟದಲ್ಲಿ ಸ್ಥಾನಪಡೆದಿರುವ ಸಚಿವರನ್ನು ಹೆಚ್ಚಾಗಿ ಪ್ರಚಾರಕ್ಕೆ ಬಳಸಿಕೊಳ್ಳಲು ಮುಂದಾಗಿದೆ.
ಆ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ 8ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.