ರಾಜ್ಯ ಬಿಜೆಪಿ ಸರ್ಕಾರ ಹಲವು ಹಗರಣಗಳಲ್ಲಿ ಭಾಗಿಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ವಿರೋಧ ಪಕ್ಷದವರಾಗಲಿ ಅಥವಾ ಸಾಮಾನ್ಯ ಜನತೆಯಾಗಲಿ ಲೋಕಾಯುಕ್ತರಿಗೆ ಲಿಖಿತ ದೂರು ಸಲ್ಲಿಸಿದರೆ ಹಗರಣ ಕುರಿತು ತನಿಖೆಗೆ ಸಿದ್ಧ ಎಂದು ಲೋಕಾಯುಕ್ತ ನ್ಯಾ| ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಹಗರಣಗಳ ಬಗ್ಗೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಆದರೆ ಈ ಬಗ್ಗೆ ಯಾರೂ ಲಿಖಿತ ರೂಪದಲ್ಲಿ ದೂರು ಸಲ್ಲಿಸಿಲ್ಲ. ಈ ಬಗ್ಗೆ ವಿರೋಧ ಪಕ್ಷದವರು ಅಥವಾ ರಾಜ್ಯದ ಸಾಮಾನ್ಯ ಜನರು ಲಿಖಿತ ರೂಪದಲ್ಲಿ ದೂರ ನೀಡಿದರೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವ ನಂಬಿಕೆ ನನಗಿಲ್ಲ. ಲೋಕಾಯುಕ್ತರಿಗೆ ಪರಮಾಧಿಕಾರ ನೀಡಬೇಕೆಂದು ಬೇಡಿಕೆ ಇದೆ. ಸರ್ಕಾರದ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನೋಡಬೇಕು ಎಂದರು.
ಇದೇ ವೇಳೆ ಭ್ರಷ್ಟಚಾರದ ಬಗ್ಗೆ ಮಾತನಾಡಿದ ಅವರು, ಸಮಾಜದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಸಾಧ್ಯವಿಲ್ಲ. ಇದರ ವಿರುದ್ಧ ಚಳವಳಿಯನ್ನು ಮಾಡಿಕೊಂಡು ಉತ್ತಮ ಸಮಾಜ ನಿರ್ಮಿಸುವ ಅಗತ್ಯ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.