ದಾವಣಗೆರೆ ಹರಪನಹಳ್ಳಿಯ ಆಲೂರು ಹಟ್ಟಿ ಎಂಬಲ್ಲಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 16.11 ಲಕ್ಷ ರೂಪಾಯಿಗಳ ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್, ಖಚಿತ ಮಾಹಿತಿ ಮೇರೆಗೆ ಆಲೂರು ಹಟ್ಟಿಯ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸ್ಫೋಟಕಗಳನ್ನು ನಿನ್ನೆ ರಾತ್ರಿ ವಶಪಡಿಸಿಕೊಂಡಿರುವುದಾಗಿ ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಸ್ಥಳೀಯರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವಿವರಿಸಿದರು.
ಕಲ್ಲುಕೋರೆಗೆ ಬಳಸುವ ಜಿಲೆಟಿನ್ ಕಡ್ಡಿ ಸೇರಿದಂತೆ ಸುಮಾರು 16.11ಲಕ್ಷ ರೂಪಾಯಿ ಮೌಲ್ಯದ ಸ್ಫೋಟಕಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಆರೋಪಿಗಳನ್ನು ಇದನ್ನು ಬೇರೆ ಕೆಲಸಕ್ಕೆ ಬಳಸುತ್ತಿರುವ ಬಗ್ಗೆಯೂ ಪಾಟೀಲ್ ಶಂಕೆ ವ್ಯಕ್ತಪಡಿಸಿದರು.
ಬಂಧಿತ ಆರು ಮಂದಿ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಿದರು. ದಾವಣಗೆರೆ ಜಿಲ್ಲಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದರು.
ವಶಪಡಿಸಿಕೊಂಡಿರುವ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಲು ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ದಾವಣಗೆರೆ ಭೇಟಿ ನೀಡಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.