ನಾಡಿನ ನೆಲ-ಜಲ-ಭಾಷೆಯ ವಿಚಾರದಲ್ಲಿ ನನ್ನ ಕುರ್ಚಿಗಿಂತ ನಾಡಿನ ಹಿತವೇ ಮುಖ್ಯವಾಗಿದೆ. ನಾಡಿನ ಹಿತಕ್ಕೆ ಧಕ್ಕೆ ಬರುವಂತಹ ಯಾವುದೇ ಕೆಲಸ ಮಾಡಲು ಇಚ್ಛಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೆನ್ನೈನ ಅಯನಾವರಂ ಪ್ರದೇಶದಲ್ಲಿ ಸರ್ವಜ್ಞನ ಪ್ರತಿಮೆ ಸ್ಥಾಪನೆಗೆ ಅಲ್ಲಿನ ಕನ್ನಡಿಗರು ಒಪ್ಪಿಗೆ ನೀಡಿದ್ದಾರೆ. ಆದ್ದರಿಂದಲೇ ನಾವು ಇಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ವಿರುದ್ಧ ಚೆನ್ನೈ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಜೊತೆ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಎರಡೂ ಕಡೆಗಳಲ್ಲಿ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಎರಡು ರಾಜ್ಯಗಳ ನಡುವಿನ ಬಾಂಧವ್ಯ ವೃದ್ದಿಸುವುದಲ್ಲದೆ ಎರಡು ರಾಜ್ಯಗಳ ನಡುವೆ ಇರುವ ಸಮಸ್ಯೆಗಳ ನಿವಾರಣೆಗೆ ಇದು ನಾಂದಿ ಹಾಡಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.