ಮುಂದಿನ ಲೋಕಸಭಾ ಚುನಾವಣೆ ಹೊತ್ತಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಗುಡ್ ಬೈ ಹೇಳುವುದು ಖಚಿತ ಎಂದು ಗೋವಿಂದರಾಜ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
ಗೋವಿಂದರಾಜ ನಗರದ ಇಂಡಸ್ಟ್ರಿಯಲ್ ವಾರ್ಡ್‌ನಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಹಿರಿಯ ಮುಖಂಡರು ಅವರು ತೂಕದ ಮಾತನ್ನಾಡಬೇಕು. ಅಗ್ಗದ ಪ್ರಚಾರಕ್ಕೆ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ನೋಡುತ್ತಿರಿ ಮುಂದಿನ ಲೋಕಸಭಾ ಚುನಾವಣೆಯ ಹೊತ್ತಿಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದಿಲ್ಲ. ಸಿದ್ದರಾಮಯ್ಯನವರು ಕಾರ್ಯಕ್ರಮವೊಂದರಲ್ಲಿ ತಮ್ಮ ಬಗ್ಗೆ ಮಾತನಾಡಿರುವುದು ಅವರ ಮುಕ್ತ ಅಭಿಪ್ರಾಯವಲ್ಲ. ಅವರ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದರು.
ಅದೇ ರೀತಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆಶಿ ಅವರು, ನಾನು ಪಕ್ಷಕ್ಕೆ ದ್ರೋಹ ಎಸಗಿ ಬಿಜೆಪಿ ಸೇರಿದ್ದೇನೆ ಎಂದು ಟೀಕಿಸಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿರುವ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ, ವಿ.ಎಸ್.ಉಗ್ರಪ್ಪ ಸೇರಿದಂತೆ ಹೆಚ್ಚಿನವರು ಪಕ್ಷಾಂತರಿಗಳೇ ಆಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.