ರಾಜ್ಯದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಶಾಸಕ ವಾಟಾಳ್ ನಾಗರಾಜ್ ಹಾಗೂ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡರನ್ನು ಮುನ್ನೆಚ್ಚರಿಕೆ ಅಂಗವಾಗಿ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಹಾಸನದಲ್ಲಿ ಪತ್ರಿಕಾಗೋಷ್ಠಿ ಮುಗಿಸಿ ಬೆಂಗಳೂರಿಗೆ ಹೊರಟಿದ್ದ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಅವರನ್ನು ಚನ್ನರಾಯಪಟ್ಟಣದ ಮಾರ್ಗದಲ್ಲಿಯೇ ಅವರನ್ನು ಬಂಧಿಸಲಾಗಿದೆ. ಬಂಧಿತ ವಾಟಾಳ್ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆ.9ರಂದು ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಅಂಗವಾಗಿ ವಾಟಾಳ್ ಅವರನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
NRB
ನಾರಾಯಣ ಗೌಡ ಬಂಧನ-ಪ್ರತಿಭಟನೆ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ಶುಕ್ರವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಸೇರಿದಂತೆ 350ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಮತ್ತು ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅವರನ್ನೆಲ್ಲಾ ಬಂಧಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಕೆಂಗೇರಿಯಲ್ಲಿ ನಿನ್ನೆ ರಾತ್ರಿ ನಾರಾಯಣ ಗೌಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಗೌಡರು ಸೇರಿದಂತೆ ಕರವೇ ಕಾರ್ಯಕರ್ತರನ್ನು ಕೋರಮಂಗಲ ಕೆಎಸ್‌ಆರ್‌ಪಿ ಗ್ರೌಂಡ್ಸ್‌ನಲ್ಲಿ ಕೂಡಿ ಹಾಕಲಾಗಿದೆ.
ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕೆಂಗೇರಿ ಪೊಲೀಸ್ ಸ್ಟೇಶನ್ ಮತ್ತು ಸೆಟಲೈಟ್ ಬಸ್ ಟರ್ಮಿನಲ್ ಪ್ರದೇಶದ ಬೆಂಗಳೂರು-ಮೈಸೂರು ಹೈವೇ ತಡೆ ನಡೆಸಿದರು.
ಮುಂಜಾಗ್ರತಾ ಕ್ರಮದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಳ್ಳಬೇಕೆಂದು ನಗರ ಪೊಲೀಸ್ ಕಮೀಷನರ್ ಶಂಕರ ಬಿದರಿ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಾರಾಯಣಗೌಡ ಬಂಧನವನ್ನು ಖಂಡಿಸಿ ಮೈಸೂರಿನ ಕೆ.ಆರ್.ವೃತ್ತದಲ್ಲೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿವೆ.