ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದ ಗದ್ದುಗೆಯಿಂದ ಕೆಳಗಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ 'ಬಿಜೆಪಿ ಚಲೇಜಾವ್ ಚಳವಳಿ'ಯನ್ನು ಪ್ರಾರಂಭಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆಂದೂ ರಾಜ್ಯದಲ್ಲಿ ಕಾಣದಷ್ಟು ವ್ಯಾಪಕ ಭ್ರಷ್ಟಾಚಾರವನ್ನು ಅಲ್ಪಾವಧಿಯಲ್ಲೇ ಬಿಜೆಪಿ ಸರ್ಕಾರ ಮಾಡಿ ಮುಗಿಸಿದೆ. ಭ್ರಷ್ಟಚಾರವೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರವನ್ನು ತೊಲಗಿಸಲು ರಾಜ್ಯದಾದ್ಯಂತ ಚಲೇಜಾವ್ ಚಳವಳಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ತಿರುವಳ್ಳುವರ್ ಪ್ರತಿಮೆ ಅನಾವರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ತಿರುವಳ್ಳುವರ್ ಪ್ರತಿಮೆ ವಿಷಯದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರ ಸರಿಯಲ್ಲ. ಕನ್ನಡ ಪರ ಸಂಘಟನೆಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕಾರ್ಯಕ್ರಮ ಆಯೋಜಿಸಬೇಕಿತ್ತು. ಅದನ್ನು ಬಿಟ್ಟು ಪ್ರತಿಭಟನಾ ನಿರತ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ದೂರಿದರು.
ಅಲ್ಲದೇ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದಿರುವ ದೇಶಪಾಂಡೆ, ಮೇಲ್ಮನೆ ಪ್ರತಿಪಕ್ಷದ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ನಾವೇನೂ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಮುಖ್ಯಮಂತ್ರಿಗಳಿಗೆ ಆಸಕ್ತಿಯಿಲ್ಲ ಎಂದು ಅವರು ಟೀಕಿಸಿದರು.