ತಿರುವಳ್ಳುವರ್ ಪ್ರತಿಮೆ ಅನಾವರಣದ ವಿರುದ್ಧ ಬಂದ್‌ಗೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ಬಂಧಿಸಿರುವ ಕನ್ನಡ ಪರ ಸಂಘಟನೆಗಳ ಹೋರಾಟಗಾರರನ್ನು ಬೇಷರತ್ತಾಗಿ ಗೌರವಪೂರ್ವಕವಾಗಿ ಬಿಡುಗಡೆಗೊಳಿಸುಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಿರುವಳ್ಳುವರ್ ಪ್ರತಿಮೆ ಅನಾವರಣವನ್ನು ಹೋರಾಟಗಾರರು ವಿರೋಧಿಸಿಲ್ಲ. ನಾಡಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಉದ್ದೇಶದಿಂದ ಷರತ್ತುಬದ್ಧ ನಿಯಮದೊಂದಿಗೆ ಅನಾವರಣಗೊಳಿಸುವಂತೆ ಹೋರಾಟಗಾರರು ಮನವಿ ಮಾಡಿದ್ದರು. ಆದರೆ ಅವರನ್ನು ಬಂಧಿಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗಿದೆ ಎಂದು ಆಪಾದಿಸಿದರು.
ಪ್ರತಿಯೊಬ್ಬ ಮನುಷ್ಯನಿಗೂ ಹೋರಾಟ ನಡೆಸುವ ಹಕ್ಕಿದ್ದು, ಅಂತೆಯೇ ಕನ್ನಡಪರ ಸಂಘಟನೆಗಳ ಹೋರಾಟಗಾರರು ಪ್ರತಿಮೆ ಅನಾವರಣ ಪ್ರತಿಭಟಿಸಿದ್ದಾರೆ. ಆದರೆ ಸರ್ಕಾರ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪ್ರಯತ್ನ ನಡೆಸಿರುವುದು ಸರಿಯಲ್ಲ ಎಂದು ಹೇಳಿದರು.
ಕನ್ನಡ ಪರ ಸಂಘಟನೆಗಳ ಹೋರಾಟಗಾರರನ್ನು ತಕ್ಷಣ ಬಿಡುಗಡೆಗೊಳಿಸಿ ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಅವರನ್ನು ತಮಿಳುನಾಡಿಗೆ ಕರೆದೊಯ್ಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.