ಈ ವರ್ಷದಿಂದಲೇ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸುವುದನ್ನು ನಿಲ್ಲಿಸಲಾಗುವುದು ಎಂದಿರುವ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ, 2011ರಿಂದ ಗ್ರಾಮೀಣ ಪ್ರದೇಶಗಳಲ್ಲೂ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದಿದ್ದಾರೆ.
ಹೊಸ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯಕ್ಕೆ ಅಗತ್ಯವಿರುವ ವಿದ್ಯುತ್ತನ್ನು ತಯಾರಿಸಿಕೊಳ್ಳಲು ಸಾಧ್ಯವಿದೆ. ಈಗಾಗಲೇ ಹಲವು ಯೋಜನೆಗಳು ಅಂತಿಮ ಹಂತ ತಲುಪಿದ್ದು, ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಯನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತಗೊಳಿಸಲಾಗುತ್ತದೆ ಎಂದು ಅವರು ಹೇಳಿದರು.
ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ಮೂಲಕ ಪ್ರಗತಿ ಕಂಡುಕೊಳ್ಳಲಾಗುತ್ತದೆ. ಅದಕ್ಕಾಗಿ ಕೆಪಿಟಿಸಿಎಲ್‌ನಿಂದಲೇ ವಿದ್ಯುತ್ ಉತ್ಪಾದನೆ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರಾಜ್ಯದಲ್ಲಿ ಹಲವು ವಿದ್ಯುತ್ ಯೋಜನೆಗಳನ್ನು ಜಾರಿಗೊಳಿಸುವ ನಿಲುವಿಗೆ ಸರಕಾರ ಬದ್ಧವಾಗಿದೆ. ಗುಂಡ್ಯ ಯೋಜನೆಯನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ನಿರಂತರ ಜ್ಯೋತಿ ಯೋಜನೆ.. ಗ್ರಾಮೀಣ ಪ್ರದೇಶಗಳಿಗೆ ನಿರಂತರ ವಿದ್ಯುತ್ ಪೂರೈಸುವ ಸಲುವಾಗಿ 'ನಿರಂತರ ಜ್ಯೋತಿ ಯೋಜನೆ'ಯನ್ನು ಕಾರ್ಯಗತಗೊಳಿಸಲಾಗುತ್ತದೆ. ಈ ಕುರಿತ ಎಲ್ಲಾ ಸಿದ್ಧತೆಗಳು ಪ್ರಗತಿಯಲ್ಲಿದೆ. ಪ್ರಾಯೋಗಿಕವಾಗಿ ಕೆಲವು ಗ್ರಾಮಗಳಲ್ಲಿ ಈಗಾಗಲೇ ಅಳವಡಿಸಲಾಗಿದ್ದು, 2011ರ ಏಪ್ರಿಲ್ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಪ್ರಾಥಮಿಕ ಹಂತದಲ್ಲಿ ಈ ಯೋಜನೆಯನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಜಾರಿಗೊಳಿಸಲಾಗುತ್ತದೆ. ಆ ನಂತರ ಇತರೆಡೆಗೂ ವಿಸ್ತರಿಸುವ ಬಗ್ಗೆ ಯೋಚಿಸಲಾಗುತ್ತದೆ. ಈ ಯೋಜನೆಯಲ್ಲಿ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.