'ರಾಜಕೀಯ ವಿದ್ಯಮಾನಗಳ ಕುರಿತು ಮೌನವಾಗಿರಲು' ಪಕ್ಷದ ವರಿಷ್ಠರಾದ ಅರುಣ್ ಜೇಟ್ಲಿಯವರು ತನಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪಕ್ಷದ ಹಿರಿಯ ನಾಯಕರು ಶೀಘ್ರವೇ ಗೊಂದಲವನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ತನಗೆ ಮೌನವಾಗಿರುವ ಸೂಚಿಸಿರುವ ಜೇಟ್ಲಿಯವರು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುವಂತೆ ಸಲಹೆ ನೀಡಿರುವುದಾಗಿ ಹೇಳಿದರು. ಅಗತ್ಯ ಇದ್ದಲ್ಲಿ ಪಕ್ಷದ ಶಾಸಕಾಂಗ ಸಭೆ ಕರೆಯುವುದಾಗಿ ಹೇಳಿದರು.
ಶುಕ್ರವಾರ ವಿಧಾನಸೌಧದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಪ್ರಮುಖ ಆದ್ಯತೆ ನೀಡಿದ್ದೇನೆ. ಅಲ್ಲದೆ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆ ಇಲ್ಲ. ಎಲ್ಲ ಬಿಕ್ಕಟ್ಟು ಶೀಘ್ರವೇ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ನೆರೆ ಸಂತ್ರಸ್ತರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 500ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ನೆರೆ ಸಂತ್ರಸ್ತರಿಗಾಗಿ 2ಲಕ್ಷ ಮನೆಗಳನ್ನು ಕಟ್ಟಿಸುವ ಗುರಿ ಹೊಂದಲಾಗಿದೆ. ಅದಕ್ಕಾಗಿ ನವೆಂಬರ್ ತಿಂಗಳ ಅಂತ್ಯದೊಳಗೆ 220 ಗ್ರಾಮಗಳ ಸ್ಥಳಾಂತರಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ನೆರೆ ಸಂತ್ರಸ್ತರ ಮನೆ ನಿರ್ಮಾಣ ಕಾರ್ಯಕ್ಕೆ ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಅವರು ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.