ಶೀಘ್ರದಲ್ಲೇ ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು. ಇದಕ್ಕೆ ಶೆಟ್ಟರ್ ಕೂಡ ಒಪ್ಪಿಗೆ ಸೂಚಿಸಿದ್ದಾರೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುವ ಮೂಲಕ ವಿವಾದಕ್ಕೆ ಹೊಸ ತಿರುವನ್ನು ನೀಡಿದ್ದಾರೆ.
ಶನಿವಾರ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲು ಹೆಲಿಕಾಪ್ಟರ್‌ನಲ್ಲಿ ಪುತ್ತೂರಿಗೆ ಬಂದಿಳಿದ ಸಿಎಂ ಸುದ್ದಿಗಾರರೊಂದಿಗೆ ಮಾತನಾಡುತ್ತ, ರಾಜ್ಯ ಬಿಜೆಪಿಯಲ್ಲಿ ಸ್ಫೋಟಗೊಂಡಿರುವ ಭಿನ್ನಮತದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಆದರೆ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಈ ಹಿಂದೆಯೇ ನಿರ್ಧರಿಸಲಾಗಿತ್ತು. ಹೈಕಮಾಂಡ್ ಆದೇಶದಂತೆ ಸ್ಪೀಕರ್ ಸ್ಥಾನಕ್ಕೆ ನೇಮಿಸಲಾಗಿತ್ತು ಎಂದರು.
ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗಿಲ್ಲ ಎಂದು ಅವರ ಶಿಷ್ಯರು ಅಸಮಾಧಾನಗೊಂಡಿದ್ದಾರೆ. ಆ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುಬ್ರಹ್ಮಣ್ಯದಲ್ಲಿ ತುಲಾಭಾರ: ಪುತ್ತೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಣದ್ರಾಕ್ಷಿಯ ತುಲಾಭಾರ ಸೇವೆ ಸಲ್ಲಿಸಿದರು. ಪಂಚಾಮೃತ, ಕ್ಷೀರಾಭಿಷೇಕ ಮಾಡಿಸಿದರು.