ಸರ್ಕಾರದ ಅಭಿವೃದ್ಧಿ ಕೆಲಸ ಗಮನಿಸಿದ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲಲ್ಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸೋಲಿಸಲೆಂದೇ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್-ಜೆಡಿಎಸ್ ನಾಯಕರು ಹೇಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ . ಚುನಾವಣೆಯಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು. ಕೇವಲ ಚಾರಿತ್ರ್ಯ ವಧೆ ಮಾಡಲೆಂದೇ ಹಾಗೂ ಇನ್ನೊಬ್ಬರನ್ನು ಸೋಲಿಸುವುದೇ ಗುರಿಯಾಗಬಾರದು ಎಂದರು.
ಕಾಂಗ್ರೆಸ್ ಸ್ಪರ್ಧೆ ಮಾಡುತ್ತಿರುವುದೇ 16 ಕ್ಷೇತ್ರಗಳಲ್ಲಿ. ಆದರೆ ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ನಾವು ಎಲ್ಲಾ 16 ಕ್ಷೇತ್ರಗಳಲ್ಲಿಯೂ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಅವರ ಹೇಳಿಕೆ ಹಾಸ್ಯಾಸ್ಪದ . ಈ ಚುನಾವಣೆಯನ್ನು ಅವರು ಗಂಭೀರವಾಗಿ ಪರಿಗಣಿಸಿದಂತಿಲ್ಲ ಎಂದು ಲೇವಡಿ ಮಾಡಿದರು.
ಪರಿಷತ್ ಪ್ರತಿಪಕ್ಷ ನಾಯಕ ಉಗ್ರಪ್ಪ ಅವರಿಗೆ ಟಿಕೆಟ್ ತಪ್ಪಿಸಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ. ಮೇಲ್ಮನೆ ಪ್ರವೇಶಿಸದಂತೆ ಕುತಂತ್ರ ನಡೆದಿದೆ ಎಂದರು.